ಬೆಂಗಳೂರು : ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.
ಖಾಲಿ ಹುದ್ದೆ ಭರ್ತಿಗೆ ಕ್ರಮ
ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಹೆಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದರು. ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ರಾಜ್ಯದ ಯಾವುದೇ ಸರ್ಕಾರಿ ಶಾಲೆಯನ್ನು ಸರ್ಕಾರ ಸ್ವಯಂಪ್ರೇರಿತವಾಗಿ ಮುಚ್ಚುವುದಿಲ್ಲ. ಆದರೆ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಶಾಸಕ ಹನುಮಂತ ರುದ್ರಪ್ಪ ನಿರಾಣಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಪೂರ್ವ ಪ್ರಾಥಮಿಕ ತರಗತಿಯಿಂದ ಪದವಿ ಪೂರ್ವ ಶಿಕ್ಷಣದವರೆಗೆ ಒಂದೇ ಸೂರಿನಡಿ ಶಿಕ್ಷಣ ನೀಡಲು ಸ್ಥಳಾವಕಾಶ ಮತ್ತು ಉತ್ತಮ ದಾಖಲಾತಿ ಹೊಂದಿರುವ ಆಯ್ದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (ಕೆಪಿಎಸ್) ಉನ್ನತೀಕರಿಸಲಾಗುತ್ತಿದೆ ಎಂದರು.
ಕೆಪಿಎಸ್ ಶಾಲೆ ಪ್ರಾರಂಭ
ಗ್ರಾಮ ಪಂಚಾಯಿತಿಗೊಂದು ಕೆಪಿಎಸ್ ಶಾಲೆ ಪ್ರಾರಂಭಿಸುವ ಉದ್ದೇಶವಿದ್ದು, ಇದನ್ನು ಹಂತ ಹಂತವಾಗಿ ಮಾಡಲಾಗುವುದು. ಶಾಲೆಗಳ ಆರಂಭಕ್ಕೂ ಮುನ್ನವೇ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪೂರ್ಣಗೊಳಿಸಲಾಗುವುದು. 2026-27ನೇ ಶೈಕ್ಷಣಿಕ ಸಾಲಿನಿಂದ ಎಲ್.ಕೆ.ಜಿ.ಯಿಂದ 5ನೇ ತರಗತಿಯವರೆಗೆ ಕೆಪಿಎಸ್ ಶಾಲೆಗಳಲ್ಲಿ ಏಕ ತರಗತಿ ಪಠ್ಯಪುಸ್ತಕ ಆಧರಿತ ದ್ವಿಭಾಷಾ ಮಾಧ್ಯಮ ಬೋಧನೆಯನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ 31 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ಶಾಸಕಿ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಒಂದೇ ಆವರಣ ಅಥವಾ ಒಂದೇ ಭೌಗೋಳಿಕ ಪ್ರದೇಶದಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ವಿಭಾಗಗಳಿದ್ದು, ಕನಿಷ್ಠ 500 ವಿದ್ಯಾರ್ಥಿಗಳ ದಾಖಲಾತಿ ಇರುವ ಶಾಲೆಗಳನ್ನು ಪರಿವರ್ತಿಸಲು ಪರಿಗಣಿಸಲಾಗುವುದು. ಒಟ್ಟು 1 ಸಾವಿರ ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಮಧು ಬಂಗಾರಪ್ಪ ವಿವರ ನೀಡಿದರು.
ಇದನ್ನೂ ಓದಿ: 400 ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಕ್ರಮ: ಸಚಿವ ವೆಂಕಟೇಶ್
