ಬೆಂಗಳೂರು: ಕುಮಾರಕೃಪ ಅತಿಥಿಗೃಹದಲ್ಲಿ ಆಂಧ್ರಪ್ರದೇಶದ ರಾಜ್ಯಪಾಲರನ್ನು ಭೇಟಿ ಮಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರು, ರಾಜ್ಯದಲ್ಲಿ ಸದ್ಯಕ್ಕೆ ಬಸ್ ದರ ಏರಿಕೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಆರ್ಥಿಕ ಸಂಕಷ್ಟ ಎದುರಾಗುವುದು ನಿಜವಾದರೂ, ಪ್ರಯಾಣಿಕರ ಮೇಲೆ ದರ ಏರಿಕೆಯ ಹೊರೆ ಹಾಕುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಮಾಡಿಲ್ಲ ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಸದ್ಯ ಸಾವಿರಾರು ಸಾಮಾನ್ಯ ಮತ್ತು ಎಲೆಕ್ಟ್ರಿಕ್ ಬಸ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಸಾರಿಗೆ ಸಂಸ್ಥೆಗಳ ಸುಧಾರಣೆಗೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಸ್ಥಳೀಯ ಸಂಸ್ಥೆ ಚುನಾವಣೆಗಳ ಬಗ್ಗೆ ಡಿಸಿಎಂ ಉತ್ತರಿಸಲಿದ್ದಾರೆ
ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಬಗ್ಗೆ ಮಾತನಾಡಿದ ಸಚಿವರು, ನಗರ ಪಾಲಿಕೆ ಮತ್ತು ಪಂಚಾಯತ್ ಚುನಾವಣೆಗಳು ನಿಗದಿತ ಸಮಯಕ್ಕೆ ನಡೆಯಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಬೆಂಗಳೂರು ನಗರ ಪಾಲಿಕೆ ಚುನಾವಣೆ ವಿಳಂಬವಾಗುತ್ತಿರುವುದರಿಂದ ಆಕಾಂಕ್ಷಿಗಳಿಗೆ ಬೇಸರವಿರುವುದು ಸಹಜ, ಆದರೆ ಈ ಕುರಿತ ಕಾನೂನು ಪ್ರಕ್ರಿಯೆಗಳ ಬಗ್ಗೆ ಉಪಮುಖ್ಯಮಂತ್ರಿಗಳು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದರು. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಕಂಡು ಜನರು ಪಕ್ಷದ ಪರವಾಗಿದ್ದಾರೆ ಎಂದು ಅವರು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಂಪುಟದ ಪುನಾರಚನೆ ವಿಳಂಬವಾಗುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಆದಷ್ಟು ಬೇಗ ಸಂಪುಟ ವಿಸ್ತರಣೆಯಾದರೆ ಆಡಳಿತಕ್ಕೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ, ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕರ್ನಾಟಕದ ಭಕ್ತರಿಗಾಗಿ 5 ಎಕರೆ ಜಾಗ ಮಂಜೂರು ಮಾಡಿದ್ದಕ್ಕೆ ಅಲ್ಲಿನ ರಾಜ್ಯಪಾಲರಿಗೆ ಕೃತಜ್ಞತೆ ಸಲ್ಲಿಸಿದರು. ಶ್ರೀಶೈಲಕ್ಕೆ ಹೋಗುವ ಭಕ್ತರಿಗಾಗಿ ತಿರುಪತಿಯ ಮಾದರಿಯಲ್ಲಿ ಸುಸಜ್ಜಿತ ವಸತಿ ನಿಲಯಗಳನ್ನು ನಿರ್ಮಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಇದನ್ನೂ ಓದಿ: ವಿಜಯ್ ಸಾಧನೆಯನ್ನ ಕೊಂಡಾಡಿದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ
