TOP NEWS

LPG: ಅಂತರರಾಷ್ಟ್ರೀಯ ಬಿಕ್ಕಟ್ಟಿನ ಎಫೆಕ್ಟ್: ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಅನಿವಾರ್ಯ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

LPG price hike inevitable says Pralhad Joshi

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ತಲೆದೋರಿರುವ ಗಂಭೀರ ಪರಿಸ್ಥಿತಿಯಿಂದಾಗಿ ಅಡುಗೆ ಅನಿಲ (LPG) ಸಿಲಿಂಡರ್ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಷ್ಟದ ಬಗ್ಗೆ ಕೇಂದ್ರ ಸರ್ಕಾರಕ್ಕೂ ತೀವ್ರ ಬೇಸರವಿದೆ ಎಂದು ಅವರು ಹೇಳಿದ್ದಾರೆ.

ಜಾಗತಿಕ ಸಂಸ್ಥೆಗಳಿಂದ ಬೆಲೆ ಏರಿಕೆ

ಜಾಗತಿಕ ಇಂಧನ ವೆಚ್ಚಗಳು ಗಗನಕ್ಕೇರುತ್ತಿರುವುದರಿಂದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದೇಶೀಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 29 ರೂಪಾಯಿ ಹೆಚ್ಚಳ ಮಾಡಿವೆ. ಕೇವಲ ಮೂರು ತಿಂಗಳ ಅವಧಿಯಲ್ಲಿ ನಡೆದಿರುವ ಎರಡನೇ ಬೆಲೆ ಏರಿಕೆ ಇದಾಗಿದೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜೋಶಿ, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿರುವುದಕ್ಕೆ ನಮಗೂ ತುಂಬಾ ವಿಷಾದವಿದೆ. ಆದರೆ ಕೇಂದ್ರ ಸರ್ಕಾರವನ್ನು ಟೀಕಿಸುವ ಮುನ್ನ ಪ್ರತಿಯೊಬ್ಬರೂ ಇಡೀ ವಿಶ್ವ ಎದುರಿಸುತ್ತಿರುವ ಬಿಕ್ಕಟ್ಟನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಸದ್ಯ ಜಾಗತಿಕವಾಗಿ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ಎಲ್‌ಪಿಜಿ ಪೂರೈಕೆಯ ಮೂಲಗಳು ತೀರಾ ಸೀಮಿತವಾಗಿವೆ ಎಂದು ಅವರು ಪರಿಸ್ಥಿತಿಯನ್ನು ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಗ್ರಾಹಕರಿಗೆ ಹೆಚ್ಚಿನ ತೊಂದರೆಯಾಗದಂತೆ ತಡೆಯಲು ಇಂಧನ ಮತ್ತು ಎಲ್‌ಪಿಜಿ ಆಮದು ಮಾಡಿಕೊಳ್ಳುವ ಸಂಪನ್ಮೂಲಗಳನ್ನು ವಿಸ್ತರಿಸಲು ನಿರಂತರ ಪ್ರಯತ್ನ ನಡೆಸುತ್ತಿದೆ. ಸದ್ಯ ಭಾರತಕ್ಕೆ ಸಾಕಷ್ಟು ದೂರದಲ್ಲಿರುವ ದೇಶಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹಡಗುಗಳ ಸಂಚಾರದ ಅವಧಿ 40 ರಿಂದ 45 ದಿನಗಳವರೆಗೆ ಹೆಚ್ಚಿರುವುದರಿಂದ ಸಾರಿಗೆ ವೆಚ್ಚ, ಮೂಲ ಬೆಲೆ ಹಾಗೂ ಇನ್ಶೂರೆನ್ಸ್ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿವೆ. ನಮಗೂ ಸಾಮಾನ್ಯ ಜನರ ಬಗ್ಗೆ ಅಷ್ಟೇ ಕಾಳಜಿಯಿದೆ, ಆದರೆ ಇಂತಹ ಪರಿಸ್ಥಿತಿಯಲ್ಲಿ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಜೋಶಿ ಸ್ಪಷ್ಟಪಡಿಸಿದರು.

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಬಿಕ್ಕಟ್ಟಿನಿಂದಾಗಿ ಜಾಗತಿಕ ಇಂಧನ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಇದಕ್ಕೂ ಮುನ್ನ ಮಾರ್ಚ್ 7 ರಂದು ಪ್ರತಿ ಸಿಲಿಂಡರ್ ಬೆಲೆಯನ್ನು 60 ರೂಪಾಯಿ ಹೆಚ್ಚಿಸಲಾಗಿತ್ತು. ಪ್ರಸ್ತುತ ದರ ಪರಿಷ್ಕರಣೆಗೂ ಮುನ್ನ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪ್ರತಿ ಎಲ್‌ಪಿಜಿ ಸಿಲಿಂಡರ್ ಮಾರಾಟದ ಮೇಲೆ ಸುಮಾರು 703 ರೂಪಾಯಿಗಳಷ್ಟು ನಷ್ಟ ಅನುಭವಿಸುತ್ತಿದ್ದವು ಎಂದು ಅಂದಾಜಿಸಲಾಗಿದೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿದ ಬಳಿಕ ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಎಲ್‌ಪಿಜಿ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೂ ಭಾರತೀಯ ಕುಟುಂಬಗಳು ಜಾಗತಿಕ ಮಾರುಕಟ್ಟೆಗೆ ಹೋಲಿಸಿದರೆ ಅತ್ಯಂತ ಕಡಿಮೆ ಬೆಲೆಗೆ ಅಡುಗೆ ಅನಿಲವನ್ನು ಪಡೆಯುತ್ತಿವೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಾಗಿರುವುದರಿಂದ, ಭಾರತದಲ್ಲಿ ಒಂದು ದೇಶೀಯ ಎಲ್‌ಪಿಜಿ ಸಿಲಿಂಡರ್ ಪೂರೈಸುವ ವೆಚ್ಚ ಈಗ 1,600 ರೂಪಾಯಿಗಳಿಗಿಂತಲೂ ಅಧಿಕವಾಗಿದೆ. ಭಾರತದ ಎಲ್‌ಪಿಜಿ ಆಮದು ವೆಚ್ಚವು ಜಾಗತಿಕ ಮಾನದಂಡವಾದ ಸೌದಿ ಕಾಂಟ್ರಾಕ್ಟ್ ಪ್ರೈಸ್ (CP) ಗೆ ಲಿಂಕ್ ಆಗಿರುತ್ತದೆ. ಹಾರ್ಮುಜ್ ಜಲಸಂಧಿಯ ಮಾರ್ಗದಲ್ಲಿ ಉಂಟಾಗಿರುವ ಸಂಘರ್ಷದಿಂದಾಗಿ ಗಲ್ಫ್ ರಾಷ್ಟ್ರಗಳಿಂದ ಇಂಧನ ಪೂರೈಕೆ ಕ್ಷೀಣಿಸಿದ್ದು, ಇದರಿಂದಾಗಿ ಸೌದಿ ಕಾಂಟ್ರಾಕ್ಟ್ ಪ್ರೈಸ್ ದರವು ಸುಮಾರು ಶೇಕಡಾ 46 ರಷ್ಟು ಏರಿಕೆಯಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಇದೇ ವೇಳೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರವು ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಬಣ ರಾಜಕೀಯದಿಂದ ನಲುಗುತ್ತಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಚಿವರೊಬ್ಬರು ರಾಜೀನಾಮೆ ನೀಡಿದ್ದಾರೆ ಹಾಗೂ ಇನ್ನು ಕೆಲವರು ಸಾರ್ವಜನಿಕವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಈ ಬೆಳವಣಿಗೆಗಳನ್ನು ಗಮನಿಸಿದರೆ ರಾಜ್ಯ ಸರ್ಕಾರ ಮತ್ತು ಆಡಳಿತದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಅವರು ಲೇವಡಿ ಮಾಡಿದರು.

ಇದನ್ನೂ ಓದಿ: ಐಟಿ ವಲಯದಲ್ಲಿ ತಲ್ಲಣ: ವಿಪ್ರೋ ಮಾಜಿ ಉದ್ಯೋಗಿಗೆ ಮತಾಂತರಕ್ಕೆ ಒತ್ತಡ ಹಾಗೂ ಕಿರುಕುಳ ಆರೋಪ,

Leave a Reply

Your email address will not be published. Required fields are marked *