ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಚಾಲನೆ ನೀಡುವ ಜೊತೆಗೆ ವನ್ಯಜೀವಿಗಳ ಸಂರಕ್ಷಣೆ ಮತ್ತು ನಾಗರಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ’ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಬಂಡಿಪುರ-ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸೂಚನೆ
ಅಗತ್ಯ ಮುನ್ನೆಚ್ಚರಿಕೆ ಹಾಗೂ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಬಂಡಿಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸಫಾರಿ ಹಾಗೂ ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಮರುಪ್ರಾರಂಭಿಸಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಈ ಭಾಗಗಳಲ್ಲಿ ಹುಲಿ ಮತ್ತು ಚಿರತೆಗಳ ಸಂಖ್ಯೆ ಹೆಚ್ಚಾಗಿದ್ದು, ಮಾನವ-ವನ್ಯಜೀವಿ ಸಂಘರ್ಷದ ಸಾಧ್ಯತೆಗಳಿರುವುದರಿಂದ ಪ್ರವಾಸಿಗರ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಇದೇ ವೇಳೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ತಕರಾರು ಎತ್ತಲು ಪ್ರಯತ್ನಿಸುತ್ತಿರುವ ಮೇಕೆದಾಟು ಯೋಜನೆ ಕುರಿತು ಮಾತನಾಡಿದ ಸಿಎಂ, ಯೋಜನೆಯ ಹಾದಿಯಲ್ಲಿ ಎದುರಾಗಬಹುದಾದ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಅವುಗಳನ್ನು ಪರಿಣಾಮಕಾರಿಯಾಗಿ ಬಗೆಹರಿಸುವಂತೆ ಸೂಚನೆ ನೀಡಿದರು.
ಮಾನವ-ವನ್ಯಜೀವಿ ಸಂಘರ್ಷಕ್ಕೆ ಎಕ್ಸ್‌ಪ್ರೆಸ್ ವೇ ಕಾರಣ?
ಸಭೆಯಲ್ಲಿ ಅಧಿಕಾರಿಗಳು ವನ್ಯಜೀವಿಗಳ ಸಂಚಾರಕ್ಕೆ ಎದುರಾಗಿರುವ ಅಡೆತಡೆಗಳ ಕುರಿತು ಪ್ರಮುಖ ಮಾಹಿತಿ ಹಂಚಿಕೊಂಡರು. ಬಿಎಂಐಸಿ ಕಾರಿಡಾರ್ ನಿರ್ಮಾಣದಿಂದಾಗಿ ಆನೆ, ಹುಲಿ ಹಾಗೂ ಚಿರತೆಗಳ ಸಾಂಪ್ರದಾಯಿಕ ಕಾಡಿನ ದಾರಿಗಳು ಬಂದ್ ಆಗಿವೆ. ಇದರಿಂದಾಗಿ ವನ್ಯಜೀವಿಗಳು ಚನ್ನಪಟ್ಟಣ ಹಾಗೂ ರಾಮನಗರ ಭಾಗದ ಗ್ರಾಮಗಳತ್ತ ಬರುತ್ತಿದ್ದು, ಸಂಘರ್ಷಕ್ಕೆ ಕಾರಣವಾಗುತ್ತಿದೆ ಎಂದು ವಿವರಿಸಿದರು.
ಅಲ್ಲದೆ, ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವೇ ನಿರ್ಮಾಣದ ಸಂದರ್ಭದಲ್ಲಿ ಪ್ರಾಣಿಗಳ ಸುರಕ್ಷಿತ ಓಡಾಟಕ್ಕಾಗಿ ಅಂಡರ್‌ಪಾಸ್, ಓವರ್‌ಪಾಸ್ ಮತ್ತು ವನ್ಯಜೀವಿ ಕಾರಿಡಾರ್‌ಗಳನ್ನು ನಿರ್ಮಿಸಬೇಕೆಂಬ ಷರತ್ತನ್ನು ವಿಧಿಸಲಾಗಿತ್ತು. ಆದರೆ, ರಸ್ತೆ ನಿರ್ಮಾಣದ ವೇಳೆ ಈ ನಿಯಮಗಳನ್ನು ಸಮರ್ಪಕವಾಗಿ ಪಾಲಿಸದಿರುವುದೇ ಈಗಿನ ಸಮಸ್ಯೆಗೆ ಕಾರಣ ಎಂದು ಅಧಿಕಾರಿಗಳು ಸಿಎಂ ಗಮನಕ್ಕೆ ತಂದರು.
ಅಪಾಯಕಾರಿ ಮರಗಳ ತೆರವುಗೊಳಿಸಲು ಕಟ್ಟುನಿಟ್ಟಿನ ಆದೇಶ
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಗಿದ ಹಾಗೂ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸುವಂತೆ ಈ ಮೊದಲೇ ಆದೇಶಿಸಿದ್ದರೂ, ತಳಮಟ್ಟದಲ್ಲಿ ಅದರ ಅನುಷ್ಠಾನ ಸಮರ್ಪಕವಾಗಿ ಆಗಿಲ್ಲ ಎಂದು ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಇದರಿಂದಾಗಿ ಮಳೆ-ಗಾಳಿಗೆ ಮರಗಳು ಬಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.
ಈ ದೂರಿಗೆ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರ್ವಜನಿಕರ ಜೀವ ರಕ್ಷಣೆ ನಮಗೆ ಮುಖ್ಯ. ತಕ್ಷಣವೇ ಅಪಾಯಕಾರಿ ಮರಗಳನ್ನು ಗುರುತಿಸಿ, ಅವುಗಳನ್ನು ತೆರವುಗೊಳಿಸಲು ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದರು.
