ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ಧರಾಮಯ್ಯ (Yathindra Siddaramaiah) ತಿಳಿಸಿದ್ದಾರೆ.
ಕಂಬಳದ ಬಗ್ಗೆ ಸಿಎಂ ನಿರ್ಧಾರ
ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಸೋಮವಾರ ನಡೆದ ದಸರಾ ಕಾರ್ಯಕಾರಿ ಸಮಿತಿಯ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಭೆಯ ಪ್ರಮುಖ ನಿರ್ಧಾರಗಳು ಹಾಗೂ ದಸರಾ ಸಿದ್ಧತೆಗಳ ಕುರಿತು ಮಾಹಿತಿ ಹಂಚಿಕೊಂಡರು.
ದಸರಾವನ್ನು ವ್ಯವಸ್ಥಿತವಾಗಿ ನಡೆಸಲು 17 ಉಪಸಮಿತಿಗಳನ್ನು ರಚಿಸಲಾಗಿದೆ. ಪ್ರತಿಯೊಂದು ಸಮಿತಿಗೆ ಕಾರ್ಯಾಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲಾಗುವುದು. ಈ ಬಾರಿಯ ದಸರಾದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ‘ಕಂಬಳ’ವನ್ನು ಆಯೋಜಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ಕಂಬಳ ಆಯೋಜನೆ ಖಚಿತವಾದರೆ ಅದಕ್ಕಾಗಿ 18ನೇ ಉಪಸಮಿತಿಯನ್ನು ರಚಿಸಲಾಗುವುದು. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ‘ಸೈಕ್ಲಿಂಗ್ ವೆಲೋಡ್ರೋಮ್’ ಪ್ರದೇಶವನ್ನು ಕಂಬಳಕ್ಕಾಗಿ ಪರಿಶೀಲಿಸಲಾಗಿದ್ದು, ಮುಖ್ಯಮಂತ್ರಿಗಳ ಅಂತಿಮ ಸೂಚನೆಯ ನಂತರ ನಿರ್ಧಾರ ಹೊರಬೀಳಲಿದೆ.
ದಸರಾ ಉದ್ಘಾಟನೆಗೆ ಹಲವು ಗಣ್ಯರ ಹೆಸರುಗಳು ಶಾಸಕರಿಂದ ಬಂದಿವೆ. ಆದರೆ, ಅಂತಿಮವಾಗಿ ಯಾರನ್ನು ಆಹ್ವಾನಿಸಬೇಕು ಎಂಬುದನ್ನು ಮುಖ್ಯಮಂತ್ರಿಗಳೇ ತೀರ್ಮಾನಿಸಲಿದ್ದಾರೆ.
ಮೈಸೂರು ನಗರದಲ್ಲಿ ಪ್ರಸ್ತುತ ನಡೆಯುತ್ತಿರುವ ಫ್ಲೈಓವರ್, ವೈಟ್ ಟಾಪಿಂಗ್ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪೈಕಿ ದಸರಾಗೂ ಮುನ್ನ ಮುಗಿಯುವ ಕೆಲಸಗಳನ್ನು ತಕ್ಷಣ ಪೂರ್ಣಗೊಳಿಸಲು ಸೂಚಿಸಲಾಗಿದೆ. ದಸರಾ ವೇಳೆಗೆ ಮುಗಿಯದ ದೀರ್ಘಾವಧಿಯ ಕಾಮಗಾರಿಗಳನ್ನು ಹಬ್ಬದ ದಿನಗಳಲ್ಲಿ ನಿಲ್ಲಿಸಿ, ಸಾರ್ವಜನಿಕರ ಹಾಗೂ ಪ್ರವಾಸಿಗರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.
ಈ ಬಾರಿ ಡ್ರೋನ್ ಶೋ ಅನ್ನು ಮತ್ತಷ್ಟು ವಿನೂತನವಾಗಿ ಆಯೋಜಿಸಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ಅನುಮತಿ ಸಿಕ್ಕರೆ ಏರ್ ಶೋ ಕೂಡ ನಡೆಸಲಾಗುವುದು.
ವಿಐಪಿಗಳಿಗೆ ಉಚಿತ ಗೋಲ್ಡ್ ಪಾಸ್ ಕ್ಯಾನ್ಸಲ್
ದಸರಾ ವೀಕ್ಷಣೆಯ ‘ಗೋಲ್ಡ್ ಪಾಸ್’ ಗೊಂದಲಗಳಿಗೆ ತೆರೆ ಎಳೆಯಲು, ಆಸನಗಳ ಸಂಖ್ಯೆಗೆ ತಕ್ಕಂತೆ ಮಾತ್ರ ಪಾಸ್‌ಗಳನ್ನು ಮುದ್ರಿಸಿ, ಹಣ ನೀಡಿ ಖರೀದಿಸುವ ಸಾರ್ವಜನಿಕರಿಗೆ ಮಾತ್ರ ನೀಡಲಾಗುವುದು. ವಿಐಪಿಗಳಿಗೆ ಉಚಿತ ಗೋಲ್ಡ್ ಪಾಸ್ ನೀಡದಿರಲು ನಿರ್ಧರಿಸಲಾಗಿದೆ.
ಅಧಿಕಾರಿಗಳು ದಸರಾ ಮತ್ತು ಎಸ್‌ಐಆರ್ ಕೆಲಸಗಳಲ್ಲಿ ನಿರತರಾಗಿದ್ದರೂ, ದಿನನಿತ್ಯದ ಸಾರ್ವಜನಿಕ ಕೆಲಸ-ಕಾರ್ಯಗಳಿಗೆ ಯಾವುದೇ ರೀತಿಯ ಭಂಗ ಬರಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.
”ದಸರಾ ನಮ್ಮ ರಾಜ್ಯದ ಹೆಮ್ಮೆ. ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ನೀಡಿದ ನೈರ್ಮಲ್ಯ, ಮಹಿಳೆಯರ ಸುರಕ್ಷತೆ, ತಾಲೂಕು ಮಟ್ಟದ ಕ್ರೀಡೋತ್ಸವಗಳಂತಹ ಉತ್ತಮ ಸಲಹೆಗಳನ್ನು ಪರಿಗಣಿಸಿ ಈ ಬಾರಿಯ ದಸರಾವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಈ ಸಮಯದಲ್ಲಿ ಅವರು ಹೇಳಿದ್ದಾರೆ.
ಇದನ್ನೂ ಓದಿ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಕರ್ನಾಟಕದಲ್ಲಿ ‘ನೀಟ್’ ವಿರುದ್ಧ ಸಹಿ ಸಮರ: ಕೆ-ಸಿಇಟಿಗೆ ಹೆಚ್ಚಿದ ಒತ್ತಾಯ!
