ಬೆಂಗಳೂರು: ಜಗಜ್ಯೋತಿ ಬಸವಣ್ಣನವರ ವಿಚಾರಗಳ ಬಗ್ಗೆ (Big News) ಅವಹೇಳನಕಾರಿ ಸಂದೇಶಗಳನ್ನು ಹರಡಿ ಹಾಗೂ ವಿವಾದಾತ್ಮಕ ಕೃತಿ ಬರೆದು ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ಲೇಖಕ ರವಿ ಹಂಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ ‘ಬಸವ ಮಂಟಪ’ ಕೃತಿಯ ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದ್ದು, ಬೆಳಗಾವಿ ಪೊಲೀಸರು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ.
ಲುಕ್‌ಔಟ್ ನೋಟಿಸ್ ಮತ್ತು ಕೊಚ್ಚಿ (Big News) ಏರ್‌ಪೋರ್ಟ್‌ನಲ್ಲಿ ಸೆರೆ
ಬಸವಣ್ಣನವರ ತತ್ವಗಳಿಗೆ ಅಪಮಾನ ಮಾಡಿರುವುದು ಹಾಗೂ ಲಿಂಗಾಯತ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ರವಿ ಹಂಜ್ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ದೂರು ದಾಖಲಾದ ಬೆನ್ನಲ್ಲೇ ಆರೋಪಿ ರವಿ ಹಂಜ್ ಯಾರ ಸಂಪರ್ಕಕ್ಕೂ ಸಿಗದೆ ಪರಾರಿಯಾಗಿದ್ದರು. ಪೊಲೀಸರು ಅವರ ಅಧಿಕೃತ ನಿವಾಸಕ್ಕೆ ನೋಟಿಸ್ ಜಾರಿಗೊಳಿಸಿದರೂ ಪತ್ತೆಯಾಗಿರಲಿಲ್ಲ.
ಆರೋಪಿಯು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿಯ ಮೇರೆಗೆ ಬೆಳಗಾವಿ ಪೊಲೀಸರು ಎಲ್ಲಾ ವಿಮಾನ ನಿಲ್ದಾಣಗಳಿಗೆ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದರು. ಇಂದು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ಕಾಣಿಸಿಕೊಂಡ ತಕ್ಷಣ ಅಲ್ಲಿನ ವಿಮಾನ ನಿಲ್ದಾಣ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಬಳಿಕ ಬೆಳಗಾವಿ ಮಾರ್ಕೆಟ್ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸದ್ಯ ಬೆಳಗಾವಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ಕೃತಿ ಮುಟ್ಟುಗೋಲಿಗೆ ಸಂಪುಟ ನಿರ್ಧಾರ, ಮತ್ತೊಂದು ಎಫ್‌ಐಆರ್
ಮತ್ತೊಂದೆಡೆ, ‘ಬಸವ ಮಂಟಪ’ ಕೃತಿಯಲ್ಲಿ ಬಸವಣ್ಣನವರನ್ನು ಅವಹೇಳನ ಮಾಡಲಾಗಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಆ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸಚಿವ ಸಂಪುಟವು ಗುರುವಾರವಷ್ಟೇ ಮಹತ್ವದ ನಿರ್ಧಾರ ಕೈಗೊಂಡಿತ್ತು. ಅಲ್ಲದೆ, ಈ ಕೃತಿಯ ಲೇಖಕ ರವಿ ಹಂಜ್ ಹಾಗೂ ಕೃತಿಯನ್ನು ಪ್ರಕಟಿಸಿದ ಪ್ರಕಾಶನದ ಮಾಲೀಕ, ಪತ್ರಕರ್ತ ವಿಶ್ವೇಶ್ವರ್ ಭಟ್ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲೂ ಎಫ್‌ಐಆರ್ ದಾಖಲಾಗಿದೆ.
ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಬಸವೇಶ್ವರರಿಗೆ ಅಪಮಾನ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಈ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಲೇಖಕ ರವಿ ಹಂಜ್ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ: “ಜಾಹೀರಾತಿಗೆ 500 ಕೋಟಿ ಖರ್ಚು ಮಾಡುವ ಸರ್ಕಾರಕ್ಕೆ ಹಣವಿಲ್ಲವೇ?”: ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಕಿಡಿ
