ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿಗಳ ಇ-ಕೆವೈಸಿ (e-KYC) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ಹೊಸ ಬಿಪಿಎಲ್ ರೇಷನ್ ಕಾರ್ಡ್ (BPL Card) ನಿರೀಕ್ಷೆಯಲ್ಲಿದ್ದ ಲಕ್ಷಾಂತರ ಬಡ ಕುಟುಂಬಗಳಿಗೆ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಅತ್ಯಂತ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಅನರ್ಹ ಫಲಾನುಭವಿಗಳ ಕಾರ್ಡ್‌ಗಳನ್ನು ಪರಿಶೀಲಿಸಿ ರದ್ದುಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹೊಸ ಕಾರ್ಡ್‌ಗಳ ವಿತರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಅರ್ಹ ಫಲಾನುಭವಿಗಳಿಗೆ ಆದಷ್ಟು ಬೇಗ ಹೊಸ ಬಿಪಿಎಲ್ ಕಾರ್ಡ್ ನೀಡಲು ಸರ್ಕಾರ ಸಜ್ಜಾಗಿದೆ.
ಸದ್ಯದಲ್ಲೇ ಅರ್ಜಿ ಸಲ್ಲಿಕೆಗೆ ಅವಕಾಶ
ಹೊಸ ಬಿಪಿಎಲ್ ಕಾರ್ಡ್‌ಗಳಿಗಾಗಿ ಅರ್ಜಿ ಸ್ವೀಕರಿಸುವ ವಿಚಾರವಾಗಿ ಸದ್ಯದಲ್ಲೇ ಮುಖ್ಯಮಂತ್ರಿ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿ, ಅಧಿಕೃತವಾಗಿ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಕಳೆದ ಹಲವು ತಿಂಗಳುಗಳಿಂದ ಹೊಸ ರೇಷನ್ ಕಾರ್ಡ್ ಪಡೆಯಲು ಕಾಯುತ್ತಿದ್ದ ಅರ್ಹ ಬಡ ಕುಟುಂಬಗಳಲ್ಲಿ ಹೊಸ ಭರವಸೆ ಮೂಡಿದ್ದು, ಸಾರ್ವಜನಿಕರು ಸರ್ಕಾರದ ಅಧಿಕೃತ ಆದೇಶದ ನಿರೀಕ್ಷೆಯಲ್ಲಿದ್ದಾರೆ.
ಇ-ಕೆವೈಸಿ ಮಾಡಲು ಹೊಸ ಆಪ್
ಇನ್ನು ಪಡಿತರದಾರರು ಇ-ಕೆವೈಸಿ ಮಾಡಿಸಿಕೊಳ್ಳಲು ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರತಿಯಲ್ಲಿ ನಿಂತು ಅನುಭವಿಸುತ್ತಿದ್ದ ತೊಂದರೆಯನ್ನು ತಪ್ಪಿಸಲು ಆಹಾರ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನದ ನೆರವು ಪಡೆದುಕೊಂಡಿದೆ. ಪಡಿತರದಾರರು ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ಮೂಲಕವೇ ಸುಲಭವಾಗಿ ಇ-ಕೆವೈಸಿ ಪೂರ್ಣಗೊಳಿಸಲು ಅನುಕೂಲವಾಗುವಂತೆ ಸಚಿವ ರಿಜ್ವಾನ್ ಅರ್ಷದ್ ಅವರು ‘ಅನ್ನಸೇವೆ’ (Anna Seve) ಎಂಬ ನೂತನ ಆ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಫಲಾನುಭವಿಗಳು ಗೂಗಲ್ ಪ್ಲೇಸ್ಟೋರ್‌ನಿಂದ ‘ಅನ್ನಸೇವೆ’, ‘ಸಿಇಜಿ ಫೇಸ್ ಕೆವೈಸಿ’ ಹಾಗೂ ‘ಆಧಾರ್ ಫೇಸ್ ಆರ್‌ಡಿ’ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡಿಕೊಂಡು, ಯುಐಡಿಎಐ (UIDAI) ಫೇಸ್ ಆಥಂಟಿಕೇಷನ್ ತಂತ್ರಜ್ಞಾನದ ಮೂಲಕ ಮುಖ ಚಹರೆ ಗುರುತಿಸಿ ಕೆವೈಸಿ ಪ್ರಕ್ರಿಯೆಯನ್ನು ಕ್ಷಣಾರ್ಧದಲ್ಲಿ ಮುಗಿಸಬಹುದಾಗಿದೆ.
ಪ್ರಸ್ತುತ ಮೊದಲ ಹಂತದಲ್ಲಿ ಈ ಮೊಬೈಲ್ ಆ್ಯಪ್ ಸೇವೆಯನ್ನು ರಾಜ್ಯದ 8 ಆಯ್ದ ಜಿಲ್ಲೆಗಳಿಗೆ ಮಾತ್ರ ಲಭ್ಯಗೊಳಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಗಳ ಪಡಿತರದಾರರು ತಕ್ಷಣವೇ ಈ ಆ್ಯಪ್ ಮೂಲಕ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ. ಇನ್ನುಳಿದ ಜಿಲ್ಲೆಗಳ ಫಲಾನುಭವಿಗಳಿಗೆ ಎರಡನೇ ಹಂತದಲ್ಲಿ ಅಕ್ಟೋಬರ್ 10 ರಿಂದ ಈ ಆ್ಯಪ್ ಬಳಸಲು ಅವಕಾಶ ನೀಡಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಇ-ಕೆವೈಸಿ ಪ್ರಕ್ರಿಯೆಯ ಅಂತಿಮ ಗಡುವನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಪ್ಲಾಸ್ಟಿಕ್ ಮುಕ್ತ ಕಾಡಿಗಾಗಿ ಕೈಜೋಡಿಸಿದ ಗ್ರಾಮಸ್ಥರು: ತುಮರಿ-ಹೊಳೆಬಾಗಿಲು ಮಾರ್ಗದಲ್ಲಿ ಬೃಹತ್ ಸ್ವಚ್ಛತಾ ಜಾಗೃತಿ!
