ಉತ್ತರ ಪ್ರದೇಶ: ಜೇವರ್ ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚಾಲನೆ ನೀಡಿದ್ದಾರೆ.
ಆಧುನಿಕ ಮೂಲಸೌಲಭ್ಯಕ್ಕೆ ಒತ್ತು
ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ದೇಶದಲ್ಲಿ ನಾಗರಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಸರ್ಕಾರದ ಬದ್ಧತೆ. ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಮೆಟ್ರೋ, ವಂದೇ ಭಾರತ್ ಸೇರಿದಂತೆ ಹಲವು ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈವರೆಗೆ ನಮೋ ಭಾರತ್ ನಲ್ಲಿ ಎರಡೂವರೆ ಕೋಟಿಗೂ ಅಧಿಕ ಜನರು ಪ್ರಯಾಣಿಸಿದ್ದಾರೆ. ಕಳೆದ 11 ವರ್ಷದ ಅವಧಿಯಲ್ಲಿ ಸರ್ಕಾರ, ಆಧುನಿಕ ಮೂಲಸೌಕರ್ಯ ನಿರ್ಮಾಣಕ್ಕೆ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರದಿಂದ ವಿವಿಧ ಅಭಿವೃದ್ಧಿ ಕಾರ್ಯ
ಮೂಲಸೌಕರ್ಯ ಕಲ್ಪಿಸಲು ಮುಂಗಡಪತ್ರದಲ್ಲಿ ಆರುಪಟ್ಟಿಗೂ ಅಧಿಕ ಹಣ ಮೀಸಲಿಡಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಹೆದ್ದಾರಿ ಮತ್ತು ಎಕ್ಸ್ ಪ್ರೆಸ್ ವೇ ನಿರ್ಮಾಣಕ್ಕೆ 17 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೊತ್ತ ವೆಚ್ಚ ಮಾಡಲಾಗಿದೆ. 1 ಲಕ್ಷ ಕಿಲೋ ಮೀಟರ್ ಹೆದ್ದಾರಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು. ದೇಶದಲ್ಲಿ 2014ರವರೆಗೆ ಕೇವಲ 20 ಸಾವಿರ ಕಿಲೋ ಮೀಟರ್ ರೈಲ್ವೆ ಹಳಿಗಳ ವಿದ್ಯುದೀಕರಣ ಮಾಡಲಾಗಿದ್ದು, 2014ರ ನಂತರ 40 ಸಾವಿರ ಕಿಲೋ ಮೀಟರ್ ಗೂ ಅಧಿಕ ರೈಲ್ವೆ ಹಳಿಗಳ ವಿದ್ಯುದೀಕರಣ ಮಾಡಲಾಗಿದೆ. ಬ್ರಾಡ್ ಗೇಜ್ ಸಂಪರ್ಕವನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದರು. ಕಾಶ್ಮೀರದ ಕಣಿವೆ ಮತ್ತು ಈಶಾನ್ಯ ಭಾರತದ ರಾಜ್ಯಗಳಿಗೂ ರೈಲು ಸಂಪರ್ಕವನ್ನು ಕಲ್ಪಿಸಲಾಗಿದೆ. ಕಳೆದ ದಶಕದಲ್ಲಿ ಬಂದರುಗಳ ಸಾಮರ್ಥ್ಯವನ್ನು ದ್ವಿಗುಣಗೊಳಿಸಲಾಗಿದೆ. ಇದೇ ವೇಳೆ ಜಲಮಾರ್ಗವು ಹೆಚ್ಚಳವಾಗಿದೆ. ವಿಕಸಿತ ಭಾರತ ನಿರ್ಮಾಣಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು. ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶದ ಎಲ್ಲರೂ ಒಟ್ಟಾಗಿ ನಿಲ್ಲುವ ಅಗತ್ಯವಿದೆ. ಆಗ ಮಾತ್ರ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಲು ಸಾಧ್ಯವಾಗಲಿದೆ. ಇದೇ ವಿಷಯವನ್ನು ಸಂಸತ್ತಿನಲ್ಲೂ ಹೇಳಲಾಗಿದೆ. ನಿನ್ನೆ ನಡೆದ ಮುಖ್ಯಮಂತ್ರಿಗಳ ಸಭೆಯಲ್ಲೂ ಚರ್ಚಿಸಲಾಗಿದೆ. ಸಂಘರ್ಷದ ಸಮಯದಲ್ಲಿ ಶಾಂತಿ, ತಾಳ್ಮೆ, ಒಗ್ಗಟ್ಟಿನಿಂದ ಮಾತ್ರ ಸಮಸ್ಯೆ ಬಗೆಹರಿಸಲು ಸಾಧ್ಯ . ಇಂತಹ ಸಮಯದಲ್ಲಿ ರಾಜಕೀಯ ಪಕ್ಷಗಳು ಎಚ್ಚರಿಕೆಯಿಂದ ಹೆಜ್ಜೆ ಇಡುವುದು ಅಗತ್ಯವಿದೆ ಎಂದು ಹೇಳಿದರು.
ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ: ಪಶ್ಚಿಮ ಏಷ್ಯಾ ಬಿಕ್ಕಟ್ಟು, ಜನರಿಗೆ ಭರವಸೆ ನೀಡಿದ ಕೇಂದ್ರ
