ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇದೇ ಡಿಸೆಂಬರ್ 8ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ವಿರೋಧ ಪಕ್ಷಗಳನ್ನು ಎದುರಿಸಲು ಸರ್ಕಾರ ಸರ್ವರೀತಿಯಲ್ಲೂ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.
ಸೂಕ್ತ ಉತ್ತರ ನೀಡಲಾಗುತ್ತದೆ
ಹಾಸನದಲ್ಲಿ ಇಂದು ಮಾತನಾಡಿದ ಅವರು, ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಪ್ರಸ್ತಾಪಿಸುವ ವಿಷಯಗಳಿಗೆ ಸೂಕ್ತ ಉತ್ತರ ನೀಡಲಾಗುವುದು. ರಾಜ್ಯ ಸರ್ಕಾರ ತೆರೆದ ಪುಸ್ತಕ ಇದ್ದಂತೆ. ನಮ್ಮದು ಪಾರದರ್ಶಕ ಸರ್ಕಾರ ಎಂದು ಹೇಳಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದ್ದು, ಇದನ್ನು ರಾಜ್ಯ ಸರ್ಕಾರ ಗಂಭೀವಾಗಿ ಪರಿಗಣಿಸಿದೆ. ಸಮಸ್ಯೆ ಬಗೆಹರಿಸಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡಲಿದೆ ಎಂದು ಹೇಳಿದರು.
ಮಹಿಳಾ ಮೀಸಲಾತಿ ಜಾರಿ ಆಗಬೇಕು
ಸಂಸತ್ ಮತ್ತು ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿ ಜಾರಿಯಾಗಬೇಕು ಎನ್ನುವುದು ಪಕ್ಷದ ಅಚಲ ನಿಲುವು. ಇದರಲ್ಲಿ ಯಾವುದೇ ರಾಜೀ ಇಲ್ಲ ಎಂದರು. ಸಿಎಂ ಕುರ್ಚಿಯ ವಿಚಾರವಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಹುದ್ದೆಯ ವಿಚಾರವಾಗಿ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬದ್ಧರಾಗಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಅವರನ್ನ ಭೇಟಿ ಆಗಿದ್ದು ಸತ್ಯ ಎಂದ ಡಿಸಿಎಂ ಡಿಕೆಶಿ
