ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಆಂತರಿಕ ತಂತ್ರಗಳನ್ನು ಹಳಿತಪ್ಪಿಸಲು ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಅವರೇ ಸಮಾಲೋಚನೆ ನಡೆಸಿದ್ದಾರೆ ಎನ್ನಲಾದ ಆಡಿಯೋವೊಂದು ಸದ್ಯ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ವಿವಾದಾತ್ಮಕ ಆಡಿಯೋ ರೆಕಾರ್ಡಿಂಗ್ಗಳು ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ್ದು, ನವದೆಹಲಿ ಮಟ್ಟದಲ್ಲೂ ಗಂಭೀರ ಚರ್ಚೆಗಳು ಆರಂಭವಾಗಿವೆ. ಆದರೆ, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಬಲವಾಗಿ ತಳ್ಳಿಹಾಕಿರುವ ಜಮೀರ್ ಅಹಮದ್ ಖಾನ್, ಈ ಆಡಿಯೋ ಸಂಪೂರ್ಣ ಸುಳ್ಳು ಮತ್ತು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಸೃಷ್ಟಿಸಲಾಗಿರುವ ‘ಡೀಪ್ ಫೇಕ್’ ಕೃತ್ಯ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ತಂತ್ರ
ಲೀಕ್ ಆಗಿರುವ ಆಡಿಯೋದಲ್ಲಿ ಕಾಂಗ್ರೆಸ್ನ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಸೋಲಿಸುವ ಕುರಿತು ಮಾತನಾಡಲಾಗಿದೆ ಎನ್ನಲಾಗುತ್ತಿದೆ. ಮಹಮ್ಮದ್ ಸಿರಾಜ್ ಎಂಬುವವರ ಜೊತೆ ನಡೆಸಿರುವ ಸಂಭಾಷಣೆಯಲ್ಲಿ, ಮುಸ್ಲಿಂ ಮತದಾರರನ್ನು ನೀವಾಗಿಯೇ ಮತಗಟ್ಟೆಗೆ ಕರೆತರಬೇಡಿ, ಒಂದು ವೇಳೆ ಅವರೇ ಬಂದರೂ ಕಾಂಗ್ರೆಸ್ ಬದಲಿಗೆ ಪಕ್ಷೇತರ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಪ್ರೇರೇಪಿಸಿ ಎಂದು ಹೇಳಿರುವ ಧ್ವನಿ ಕೇಳಿಬಂದಿದೆ. ಮುಸ್ಲಿಂ ಸಮುದಾಯದ ನಾಯಕರಿಗೆ ಟಿಕೆಟ್ ಸಿಗದಿದ್ದಕ್ಕೆ ಅಲ್ಪಸಂಖ್ಯಾತ ವಲಯದಲ್ಲಿ ಉಂಟಾಗಿದ್ದ ಅಸಮಾಧಾನವನ್ನು ಬಳಸಿಕೊಂಡು ಪಕ್ಷಕ್ಕೆ ದ್ರೋಹ ಬಗೆಯಲು ಈ ಒಳಸಂಚು ರೂಪಿಸಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಈ ಸೂಕ್ಷ್ಮ ವಿದ್ಯಮಾನದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್, ಪಕ್ಷವಿರೋಧಿ ಚಟುವಟಿಕೆಯ ಆರೋಪದ ಮೇಲೆ ಇಬ್ಬರು ಹಿರಿಯ ಅಲ್ಪಸಂಖ್ಯಾತ ನಾಯಕರಾದ ಅಬ್ದುಲ್ ಜಬ್ಬಾರ್ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ತಕ್ಷಣವೇ ಪಕ್ಷದಿಂದ ಅಮಾನತುಗೊಳಿಸಿ ಕಠಿಣ ಶಿಸ್ತುಕ್ರಮ ಜರುಗಿಸಿದೆ.
AI ವಿಡಿಯೋ ಎಂದ ಜಮೀರ್
ಇನ್ನೊಂದೆಡೆ ಈ ಕುರಿತು ಸುದೀರ್ಘ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವ ಜಮೀರ್ ಅಹಮದ್ ಖಾನ್, ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರ ಎಂದು ಆಕ್ರೋಶ ಹೊರಹಾಕಿದ್ದಾರೆ. ನನ್ನ ರಾಜಕೀಯ ಬೆಳವಣಿಗೆಯನ್ನು ಸಹಿಸದ ವಿರೋಧಿಗಳು ಸಾರ್ವಜನಿಕರಲ್ಲಿ ಹಾಗೂ ಪಕ್ಷದ ವಲಯದಲ್ಲಿ ಗೊಂದಲ ಸೃಷ್ಟಿಸಲು ಇಂತಹ ಕಿಡಿಗೇಡಿತನಕ್ಕೆ ಕೈಹಾಕಿದ್ದಾರೆ. ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ಈ ನಕಲಿ ಆಡಿಯೋ ಸೃಷ್ಟಿಸಿದವರ ವಿರುದ್ಧ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ತಾವು ಯಾವಾಗಲೂ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದು, ಈ ಆಡಿಯೋದ ಸತ್ಯಾಸತ್ಯತೆ ತಿಳಿಯಲು ಸರ್ಕಾರ ಯಾವುದೇ ರೀತಿಯ ಉನ್ನತ ಮಟ್ಟದ ತನಿಖೆ ನಡೆಸಿದರೂ ಎದುರಿಸಲು ಸಿದ್ಧ ಎಂದು ಮುಕ್ತ ಸವಾಲು ಹಾಕಿದ್ದಾರೆ.
